ಆರ್ ಟಿ ಐ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು-ಸಮಗ್ರ ತನಿಖೆಗೆ ಕಾಂಗ್ರೇಸ್ ಒತ್ತಾಯ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕಾಂಗ್ರೇಸ್ ಯುವನಾಯಕ, ಆರ್ ಟಿಐ ಕಾರ್ಯಕರ್ತ ಪದ್ಮನಾಭ ಸಾಮಂತ್ ವಾಮದಪದವು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಸಂಶಯ ನಮಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಒತ್ತಾಯಿಸಿದ್ದಾರೆ.
ಬಿ.ಸಿ.ರೋಡಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪದ್ಮನಾಭ ಸಾಮಂತ್ ಕಾಂಗ್ರೇಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಸಾಮಾಜಿಕ ಹೋರಾಟಗಾರರಾಗಿ, ಆರ್ ಟಿಐ ಕಾರ್ಯಕರ್ತರಾಗಿ ಹಲವು ಪ್ರಕರಣಗಳನ್ನು ಬಯಲಿಗೆಳೆದಿದ್ದರು. ನಿರಂತರ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದ ಅವರು ಬಿಜೆಪಿ ಮುಖಂಡರು ಸಹಿತ ಇತರರ ಹಲವು ಆಕ್ರಮ ಹಾಗೂ ಭ್ರಷ್ಟಾಚಾರಗಳ ವಿರುದ್ಧ ಧ್ವನಿ ಎತ್ತಿದ್ದರು. ಇದರಿಂದಾಗಿ ಅನೇಕ ಮಂದಿಗೆ ಅವರ ಮೇಲೆ ದ್ವೇಷವಿತ್ತು ಎಂದು ಅವರು ಹೇಳಿದರು.
ಸಾಮಂತರ ಮೇಲೆ ಈ ಹಿಂದೆಯೂ ಕೊಲೆಯತ್ನ ನಡೆದಿತ್ತು. ಜೀವ ಬೆದರಿಕೆಯೂ ಇತ್ತು. ಈ ಬಗ್ಗೆ ಪದ್ಮನಾಭ ಸಾಮಂತ್ ಪೋಲಿಸರಿಗೆ ಎರಡು ಮೂರು ಬಾರಿ ದೂರನ್ನು ನೀಡಿದ್ದರು.
ಇದೀಗ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆದರೆ ಮೃತದೇಹವಿದ್ದ ಸ್ಥಿತಿಯನ್ನು ಕಂಡಾಗ ಇದೊಂದು ವ್ಯವಸ್ಥಿತ ಕೊಲೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಮನೆಮಂದಿ ಕೂಡ ಸಂಶಯ ವ್ಯಕ್ತಪಡಿಸಿದ್ದಾರೆ. ಅದ್ದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಗೃಹಸಚಿವರಿಗೆ ಮನವಿ ಮಾಡಲಾಗಿದೆ ಎಂದು ಚಂದ್ರಪ್ರಕಾಶ್ ಶೆಟ್ಟಿ ಹೇಳಿದರು.

ಉಗ್ರ ಹೋರಾಟ: ಬೇಬಿ ಕುಂದರ್

ಈ ಪ್ರಕರಣವನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಮುಂದಕ್ಕೆ ಇಂತಹ ಘಟನೆಗಳು ಮರುಕಳಿಸಬಾರದು. ಯಾರ ಮೇಲೆ ಸಂಶಯ ಇದೆಯೋ ಅವರನ್ನು ತನಿಖೆಗೊಳಪಡಿಸಬೇಕು. ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲೆಯಾದ್ಯಾಂತ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಹೇಳಿದರು.

ಕೆಪಿಸಿಸಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪದ್ಮಶೇಖರ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ ಜೋರಾ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.